ಮಕ್ಕಳಲ್ಲಿ ಅಡಗಿರುವ ಪ್ರತಿಭೆ ಹೊರ ತರಲು ಪ್ರತಿಭಾ ಕಾರಂಜಿ ಸೂಕ್ತ ವೇದಿಕೆ
(KOLARA): ಬಂಗಾರಪೇಟೆ :ಮಕ್ಕಳಲ್ಲಿ ಅಡಗಿರುವ ಪ್ರತಿಭೆ ಹೊರ ತರಲು ಪ್ರತಿಭಾ ಕಾರಂಜಿ ಸೂಕ್ತ ವೇದಿಕೆಯಾಗಿದ್ದು, ಮಕ್ಕಳು ಕೂಡ ಉತ್ಸಾಹದಿಂದ ಪಾಲ್ಗೊಳ್ಳಬೇಕು ಎಂದು ಐನೋರಹೊಸಹಳ್ಳಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾದ ಮಂಜುನಾಥ್ ಹೇಳಿದರು.
ತಾಲೂಕಿನ ಕಾರಮಂಗಳ ಪ್ರೌಢಶಾಲೆ ಆವರಣದಲ್ಲಿ ಹಮ್ಮಿಕೊಂಡಿದ್ದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ಪ್ರತಿಭಾ ಕಾರಂಜಿ ಮೂಲಕ ಮಕ್ಕಳಲ್ಲಿರುವ ಪ್ರತಿಭೆಗಳನ್ನು ಚಿಕ್ಕವಯಸ್ಸಿನಲ್ಲಿಯೇ ಗುರುತಿಸಿ ಅವರನ್ನು ಸಮಾಜಕ್ಕೆ ಪರಿಚಯ ಮಾಡುವಂತಹ ಕಾರ್ಯ ಶಿಕ್ಷಣ ಇಲಾಖೆ ಹಮ್ಮಿಕೊಂಡಿರುವುದು ಸಂತಸದ ವಿಷಯ ಇದನ್ನು ಮಕ್ಕಳು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಆಂಜನೇಯ ಗೌಡ ಮಾತನಾಡಿ, ಪ್ರತಿಯೊಂದು ಮಗುವಿನಲ್ಲೂ ಒಂದಲ್ಲ ಒಂದು ಸಾಂಸ್ಕೃತಿಕ ಪ್ರತಿಭೆಗಳು ಅಡಗಿರುತ್ತದೆ ಅದನ್ನು ಗುರುತಿಸಿ ಅನಾವರಣ ಮಾಡುವ ಮೂಲಕ ಮಕ್ಕಳು ಸರ್ವಾಂಗೀಣ ಬೆಳವಣಿಗೆ ಸಾಧಿಸಲು ಅವಕಾಶ ಕಲ್ಪಿಸಬೇಕು, ಸೋಲು ಗೆಲುವಿನ ಬಗ್ಗೆ ಯೋಚಿಸದೆ ಸ್ಪರ್ಧೆಗಳಲ್ಲಿ ಎಲ್ಲ ವಿದ್ಯಾರ್ಥಿಗಳು ಭಾಗವಹಿಸಬೇಕು ಸೋಲು ಗೆಲುವು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಎಂದು ತಿಳಿಸಿದರು.
ಮುಖ್ಯ ಶಿಕ್ಷಕ ಸಂಜೀವಪ್ಪ ಮಾತನಾಡಿ,ಸರಕಾರ ಶಾಲಾ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಪ್ರತಿಭಾ ಕಾರಂಜಿ, ಮಕ್ಕಳ ಮೇಳ, ಕ್ರೀಡಾ ಕಾರ್ಯಕ್ರಮಗಳನ್ನು ಆಯೋಜಿಸಿದೆ. ಇಲ್ಲಿ ಮಕ್ಕಳು ತಮ್ಮಲ್ಲಿರುವ ಕಲೆ, ಸಾಹಿತ್ಯ, ಜಾನಪದ ಪ್ರಾಕಾರದ ಪ್ರತಿಭೆಯನ್ನು ತೋರಿ ಸಾಂಸ್ಕೃತಿಕವಾಗಿ ಮುಂದೆ ಬರಬೇಕು ಎಂದರು.
ಇಂದೇ ಸಿಆರ್‌ಪಿಯಾಗಿದ್ದ ವಿಜಿ ಕುಮಾರ್ ರವರಿಗೆ ಬೇರೆ ಕಡೆ ವರ್ಗಾವಣೆ ಆದ ಹಿನ್ನೆಲೆ ಕಾರಮಂಗಳ ಕ್ಲಸ್ಟರ್ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಬಿಳ್ಕೊಡುಗೆ ಸಮಾರಂಭವನ್ನು ನೆರವೇರಿಸಿದರು.
ಈ ಸಂದರ್ಭದಲ್ಲಿ ಕಾರಮಂಗಳ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಪರಮೇಶ್, ಎಸ್ಸಿ ಎಸ್ಟಿ ನೌಕರ ಸಂಘದ ಅಧ್ಯಕ್ಷ ನಾರಾಯಣಸ್ವಾಮಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷ ಕಾಂತರಾಜ್, ಸಿಆರ್ ಪಿ ವೆಂಕಟಸ್ವಾಮಿ, ಶಿಕ್ಷಕರಾದ, ರಮೇಶ್, ಶ್ರೀನಿವಾಸ್,ನಾರಾಯಣಸ್ವಾಮಿ, ಆದಿ ನಾರಾಯಣ,ಅಬ್ದುಲ್, ಸತೀಶ್,ಹಂಸ,ಹೇಮಲತಾ, ಶಾಂತಕುಮಾರಿ ಹಾಗೂ ಮೊದಲಾದವರು ಇದ್ದರು.
ವರದಿ: ವಿಷ್ಣು ಕೋಲಾರ